ಬಿಜೆಪಿಗೆ ಗವರ್ನರ್ ಅನುಮತಿ : ಇಂದು ಬೆಳಗ್ಗೆ ಬಿಎಸ್​ವೈ ಪ್ರಮಾಣವಚನ..! ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶ..!!

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ.

ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಗುರುವಾರ ಬೆಳಗ್ಗೆ ರಾಜಭವನದಲ್ಲಿ ಬಿಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂತಸ ಗಳಿಗೆಯಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಗ್ಗೆ ಸರ್ಕಾರ ರಚನೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಿತು. ಶಾಸಕಾಂಗದ ನಾಯಕರಾಗಿ ಯಡಿಯೂರಪ್ಪನವರನ್ನು ಆಯ್ಕೆ ಮಾಡಿದ ಬಳಿಕ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ಸ್ಥಾಪನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಸಂಜೆಯ ವೇಳೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದರು. ಹೀಗಾಗಿ ರಾಜ್ಯಪಾಲರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಹೆಚ್ಚಿತ್ತು. ಈಗ ರಾಜ್ಯಪಾಲರು ಬಿಜೆಪಿಗೆ ಅನುಮತಿ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗುವ ಸಾಧ್ಯತೆಯಿದೆ.

ಬಿಎಸ್ ಯಡಿಯೂರಪ್ಪ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಈಗಾಗಲೇ ಅರ್ಚಕರು ಆಗಮಿಸಿದ್ದಾರೆ.

3 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್.ವೈ. ಪ್ರಮಾಣ

ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಅವರು ನಾಳೆ ಬೆಳಿಗ್ಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2007 ರ ನವೆಂಬರ್ 12 ರಂದು ಮತ್ತು 2008 ರ ಮೇ 30 ರಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 2007 ರ ನವೆಂಬರ್ 12 ರಿಂದ 19 ರ ವರೆಗೆ 7 ದಿನ, 2008 ರ ಮೇ 30 ರಿಂದ 2011 ರ ಜುಲೈ 31 ರವರೆಗೆ 3 ವರ್ಷ 62 ದಿನಗಳ ಕಾಲ ಅವರು ಮುಖ್ಯಮಂತ್ರಿಯಾಗಿದ್ದರು. ಈಗ 3 ನೇ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

9-30 ಕ್ಕಲ್ಲ 9 ಗಂಟೆಗೆ ಯಡಿಯೂರಪ್ಪ ಪ್ರಮಾಣವಚನ

ಈಗಾಗಲೇ ರಾಜ್ಯಪಾಲರಿಂದ ಅಧಿಕೃತ ಆಹ್ವಾನ ಬಂದಿದ್ದು, ನಾಳೆ ಬೆಳಿಗ್ಗೆ 9.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆಗಳು ನಡೆದಿವೆ. ಮೊದಲಿಗೆ ಮಧ್ಯಾಹ್ನ 12.20 ಕ್ಕೆ ಬಿ.ಎಸ್.ವೈ. ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತಾದರೂ, ಬೆಳಿಗ್ಗೆ 9 ಕ್ಕೆ ಪ್ರಮಾಣವಚನ ಸ್ವೀಕರಿಸಲು ಬಿ.ಎಸ್.ವೈ. ಸಜ್ಜಾಗಿದ್ದಾರೆ. ಮೇ 27 ರೊಳಗೆ ಬಹುಮತವನ್ನು ಸಾಬೀತುಪಡಿಸಲು ರಾಜ್ಯಪಾಲರು ಬಿ.ಎಸ್.ವೈ. ಅವರಿಗೆ ಸೂಚಿಸಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ವದಂತಿ ಈಗ ಅಧಿಕೃತವಾಗಿದ್ದು, 9-30 ಕ್ಕಲ್ಲ ಬದಲಾಗಿ ಬೆಳಿಗ್ಗೆ 9 ಗಂಟೆಗೆ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಲ್ಲದೇ ಬಹುಮತ ಸಾಬೀತುಪಡಿಸಲು ಅವರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಬಿಜೆಪಿ ಕಚೇರಿಯಲ್ಲಿ ಈ ಕುರಿತು ಅಧಿಕೃತವಾಗಿ ಪ್ರಕಟಿಸಿದ್ದು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದು, ಪಕ್ಷದ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆಂದು ತಿಳಿಸಿದ್ದಾರೆ.

ಅಧಿಕಾರಕ್ಕೇರುವ ಸಲುವಾಗಿ ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಂಡಿದೆ ಎಂಬ ಕಾಂಗ್ರೆಸ್-ಜೆಡಿಎಸ್ ಆರೋಪವನ್ನು ತಳ್ಳಿ ಹಾಕಿದ ಮುರಳೀಧರ ರಾವ್, ಸಂವಿಧಾನ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ರಾಜ್ಯಪಾಲರು ಈ ತೀರ್ಮಾನ ತೆಗೆದುಕೊಂಡಿದ್ದಾರೆಂದು ಸಮರ್ಥಿಸಿಕೊಂಡಿದ್ದಾರೆ.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುವುದು ಖಚಿತವಾಗುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಈ ಕ್ಷಣಕ್ಕೆ ಸಾಕ್ಷಿಯಾಗಲು ರಾಜ್ಯದ ವಿವಿಧ ಭಾಗಗಳಿಂದ ಕಾರ್ಯಕರ್ತರು ರಾಜಧಾನಿಗೆ ತೆರಳುತ್ತಿದ್ದಾರೆ.

👍👍 ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಪೇಜ್ ಲೈಕ್ ಮಾಡಿ 👍👍